
ಬೆಂಗಳೂರು : ಗೃಹಲಕ್ಷ್ಮಿ ಯೋಜನೆಯ ಎರಡು ಕಂತುಗಳ ಹಣವನ್ನು ಮಾರ್ಚ್ 31ರ ಬಳಿಕ ಬಿಡುಗಡೆ ಮಾಡಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ.ಎರಡು ತಿಂಗಳ ಗೃಹಲಕ್ಷ್ಮಿ ಹಣ ಬಾಕಿ ಉಳಿದಿದೆ. ಎಲ್ಲರಿಗೂ ಹಣ ಲಭಿಸಿಲ್ಲ ಎಂದು ಹೇಳಲಾಗಿದೆ. ಈ ಬಗ್ಗೆ ಭಾನುವಾರ ಬೆಳಗಾವಿಯಲ್ಲಿ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಸಚಿವೆ, “ಮಾರ್ಚ್ 31ರ ಬಳಿಕ ಗೃಹಲಕ್ಷ್ಮಿ ಯೋಜನೆಯ ಎರಡು ಕಂತುಗಳ ಹಣವನ್ನು ಬಿಡುಗಡೆ ಮಾಡಲಾಗುವುದು” ಎಂದು ಹೇಳಿದ್ದಾರೆ.ಹಾಗೆಯೇ, “ನಮ್ಮ ಸರ್ಕಾರ ಅಧಿಕಾರದಲ್ಲಿದ್ದಾಗಲೇ ಅಂಗನವಾಡಿ ಕಾರ್ಯಕರ್ತೆಯರ ಗೌರವಧನವನ್ನು ಎರಡು ಸಾವಿರ ರೂಪಾಯಿ ಹೆಚ್ಚಿಸಲಾಗಿದೆ. ಈ ಬಜೆಟ್‌ನಲ್ಲಿ ಕಾರ್ಯಕರ್ತೆಯರ ಗೌರವಧನವನ್ನು 750 ರೂಪಾಯಿ ಸಹಾಯಕಿಯರ ಗೌರವಧನವನ್ನು 500 ರೂಪಾಯಿ ಹೆಚ್ಚಿಸುವ ಘೋಷಣೆ ಮಾಡಿದ್ದೇವೆ. ಅದನ್ನು ಶೀಘ್ರವೇ ಜಾರಿಗೊಳಿಸುತ್ತೇವೆ” ಎಂದು ತಿಳಿಸಿದರು.ಇನ್ನು ಈ ವೇಳೆಯೇ ಹನಿಟ್ರ್ಯಾಪ್ ಬಗ್ಗೆ ಸಚಿವೆ ಪ್ರತಿಕ್ರಿಯಿಸಿದರು. “ಸಚಿವರೊಬ್ಬರಿಗೆ ಹನಿಟ್ರ್ಯಾಪ್ ಮಾಡಲು ಯತ್ನಿಸಿರುವುದು ದುರದೃಷ್ಟಕರ ಸಂಗತಿಯಾಗಿದೆ. ರಾಜಣ್ಣ ತಮ್ಮ ಅನುಭವ ಹಂಚಿಕೊಂಡಿದ್ದು, ಮುಖ್ಯಮಂತ್ರಿ, ಉಪಮುಖ್ಯಮಂತ್ರಿ, ಇತರೆ ಸಚಿವರು ತಮ್ಮ ಪ್ರತಿಕ್ರಿಯೆ ನೀಡಿದ್ದಾರೆ. ನಾನು ಈ ಬಗ್ಗೆ ಹೆಚ್ಚು ಮಾತನಾಡುವುದಿಲ್ಲ. ಈ ವಿಚಾರವನ್ನು ಗೃಹ ಸಚಿವರು ನೋಡಿಕೊಳ್ಳುತ್ತಾರೆ” ಎಂದು ಹೇಳಿದರು.